Wednesday, February 9, 2022

ಮರಕುಂದಾ: ಬೆಳಕು ಯೋಜನೆ ಉದ್ಘಾಟಿಸಿ, ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.


ಬೀದರ್ (ಫೆ.09): ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರಕುಂದಾ ಗ್ರಾಮದ ಗ್ರಾಮ ಪಂಚಾಯತಿ ಕಛೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ, ಇಂಧನ ಇಲಾಖೆಯ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಾಯೋಜಕತ್ವದ ‘ಬೆಳಕು’ ಯೋಜನೆ ಹಾಗೂ ತಾಲೂಕು, ಹೋಬಳಿ, ಗ್ರಾಮಮಟ್ಟದ ಅಧಿಕಾರಿಗಳನ್ನೊಳಗೊಂಡ ಜನಸ್ಪಂದನಾ ಕಾರ್ಯಕ್ರಮವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಳಕು ಯೋಜನೆ ಉತ್ತಮವಾದ ಯೋಜನೆಯಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಸಫಲತೆಗಾಗಿ ಅಧಿಕಾರಿಗಳು ಕೂಡ ಶ್ರಮವಹಿಸಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಬೇಕೆಂದರು.

ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಕರಿಸಿ, ಪ್ರತಿಯೊಬ್ಬರ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡುವುದು. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವುದು ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಗ್ರಾಮಗಳಲ್ಲಿ ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ಅನೇಕ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಇನ್ನೂ ಅನೇಕ ವ್ಯಕ್ತಿಗಳಿಗೆ ಈ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸ್ಥಳೀಯ ಅಧಿಕಾರಿಗಳು ಆ ಕೆಲಸ ಮಾಡಬೇಕು. 

ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳುತ್ತಿಲ್ಲ. ನಮಗೆ ಕೆಲಸ ನೀಡುತ್ತಿಲ್ಲವೆಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಗ್ರಾಮಗಳಲ್ಲಿ ಡಂಗುರಾ ಸಾರಬೇಕು. ಗ್ರಾಮೀಣ ಭಾಗದ ಪ್ರತೊಯೊಬ್ಬರಿಗೂ ಸರ್ಕಾರದ ಯೋಜನೆಗಳು ತಲುಪಬೇಕೆಂದು ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.

ಗ್ರಾಮದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕೆಲವು ಸಮಸ್ಯೆಗಳಿವೆ ಪರಿಹಾರ ಒದಗಿಸಿಕೊಡಬೇಕೆಂದು ಗ್ರಾಮಸ್ಥರು, ಶಿಕ್ಷಕರು ಮನವಿ ಮಾಡಿದರು. ಕೂಡಲೇ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುತ್ತೇವೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು. ಕೃಷಿ, ಆರೋಗ್ಯ, ಜೆಸ್ಕಾಂ, ತೋಟಗಾರಿಕೆ, ಅರಣ್ಯ, ಕುಡಿಯುವ ನೀರು ಮತ್ತು ನೈರ್ಮಲ್ಯ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಇಲಾಖೆಯಲ್ಲಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು. 

ಜನಸ್ಪಂದನಾ ಕಾರ್ಯಕ್ರಮದಲ್ಲಿ ಅನೇಕ ಸಮಸ್ಯೆಗಳನ್ನು ಜನರು ನಮ್ಮ ಗಮನಕ್ಕೆ ತಂದಿದ್ದಾರೆ. ಕಂದಾಯ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ. ಒಂದೇರಡು ವಾರದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇವೆ. ಕೈಗೊಂಡ ಕ್ರಮಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡುತ್ತೇವೆಂದು ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ ಹೆಚ್.ಎಸ್ ಹೇಳಿದರು. 

ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನೋಟ್ ಮಾಡಿಕೊಂಡಿದ್ದಾರೆ. ಪ್ರತಿಯೊಂದು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮಕೈಗೊಳ್ಳುತ್ತೇವೆ. ಉದ್ಯೂಗ ಖಾತ್ರಿ ಸಮಸ್ಯೆಯನ್ನು ಕೂಡಲೇ ಪರಿಹರಿಸುತ್ತೇವೆಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗದಿಗೆಪ್ಪ ಕುರಕುಟ್ಟೆ ತಿಳಿಸಿದರು.  

ಕಾರ್ಯಕ್ರಮದಲ್ಲಿ ಬೆಳಕು ಯೋಜನೆಯ ಹಕ್ಕುಪತ್ರ, ವಿವಿಧ ಪ್ರಮಾಣ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ವಿದ್ಯಾರ್ಥಿಗಳಾದ ನರ್ಮದಾ, ಭಾಗ್ಯ ಜ್ಯೋತಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಆಶಾಕಾರ್ಯಕರ್ತೆ ಸ್ವಪ್ನ ಸ್ವಾಗತ ಗೀತೆ ಹಾಡಿದರು. ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ ಹೆಚ್.ಎಸ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗದಿಗೆಪ್ಪ ಕುರಕುಟ್ಟೆ, ಜೆಸ್ಕಾಂ ಅಧಿಕಾರಿ ವೀರಭದ್ರಪ್ಪ ಸಾಲಿಮನೆ, ಬಿಇಒ ಸೂರ್ಯಕಾಂತ ಮದಾನೆ, ಗ್ರಾಮ ಪಂಚಾಯತಿ ಅಧ್ಯಕ್ಷೆ, ಮೇಹರುನಾ ಬೇಗಂ, ಉಪಾಧ್ಯಕ್ಷೆ ಶೇಕಮ್ಮಾ, ಪಿಡಿಒ ಶಶಿಕಲಾ, ದೂಳಪ್ಪ, ಸಂಗಾರೆಡ್ಡಿ, ಝಗ್ಗಿ ಅಹಮದ್ ಖಾನ್, ಚನ್ನಪ್ಪ ಚಿಪದಿ, ಇಕ್ಬಾಲ್, ಬಸು ಮೇತ್ರಿ, ಚನ್ನಪ್ಪ ಗಡ್ಡು, ವಿಠಲ್ ಮುತಾಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು. 


ಸರ್ಕಾರಿ ಶಾಲೆಗೆ ಭೇಟಿ: 

ಜನಸ್ಪಂದನಾ ಕಾರ್ಯಕ್ರಮದ ಬಳಿಕ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿದರು. ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಜೆಕ್ಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.  ಈ ವೇಳೆ ಮಾತನಾಡಿದ ಅವರು, ಶಾಲೆಯಲ್ಲಿ ಸದಾಕಾಲವೂ ಮಕ್ಕಳು ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಗ್ರಾಮಸ್ಥರಿಗೆ ತಿಳಿ ಹೇಳಬೇಕೆಂದು ಶಿಕ್ಷಕರಿಗೆ ತಿಳಿಸಿದರು. ಬಿಇಒ ಸೂರ್ಯಕಾಂತ ಮದಾನೆ, ಅಕ್ಷರ ದಾಸೋಹ ಯೋಜನಾಧಿಕಾರಿ ಗೀತಾ, ಶಾಲೆಯ ಮುಖ್ಯೋಪಾಧ್ಯಾಯರಾದ ದಿಗಂಬರ್ ಸೇರಿದಂತೆ ಅನೇಕರಿದ್ದರು.

ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಉಪಸ್ಥಿತರಿದ್ದರು.


No comments:

Post a Comment